Belagavi

ರಾಯಚೂರು ನ್ಯಾ.ಮಲ್ಲಿಕಾರ್ಜುನಗೌಡ ವಿರುದ್ಧ ಬೆಳಗಾವಿಯಲ್ಲಿಯೂ ಸಿಡಿದೆದ್ದ ದಲಿತ ಸಂಘಟನೆಗಳು

Share

ಗಣರಾಜ್ಯೋತ್ಸವ ದಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ತೆಗೆಯುವಂತೆ ಹೇಳಿರುವ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರ ದುರ್ವರ್ತನೆಗೆ ರಾಜ್ಯಾಧ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ಘಟನೆ ಖಂಡಿಸಿ ಬೆಳಗಾವಿಯಲ್ಲಿಯೂ ವಿವಿಧ ದಲಿತ ಸಂಘಟನೆಗಳ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಶನಿವಾರ ಬೆಳಗಾವಿ ಡಿಸಿ ಕಚೇರಿ ಮುಂಭಾಗದಲ್ಲಿ ಸಫಾಯಿ ಕರ್ಮಚಾರಿ ಕಾವಲು ಸಮಿತಿ ಮತ್ತು ಆದಿ ಜಾಂಭವ ಸಮಾಜ ಸೇವಾ ಸಂಘದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಸಂವಿಧಾನಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಮಾಡಿರುವ ಅಪಮಾನಕ್ಕೆ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ದಲಿತ ಮುಖಂಡ ವಿಜಯ್ ನೀರಗಟ್ಟಿ ಉದ್ಧಟತನ ಮೆರೆದಿರುವ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಬೇಕು. ಘಟನೆ ನಡೆದು ಮೂರು ದಿನ ಆಗುತ್ತಾ ಬಂದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದು ದಲಿತರ ಮನಸ್ಸಿಗೆ ಸಾಕಷ್ಟು ಘಾಸಿಗೊಳಿಸಿದೆ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಸಫಾಯಿ ಕರ್ಮಚಾರಿ ಕಾವಲು ಸಮಿತಿ ಮತ್ತು ಆದಿ ಜಾಂಭವ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ಭಾಗಿಯಾಗಿದ್ದರು.

Tags: